ಸಂವಿಧಾನ ನೀಡಿರುವ ಹಕ್ಕು ಬಾಧ್ಯತೆಗಳ ಬಗ್ಗೆ ಅರಿವು ಅವಶ್ಯಕ- ಮುಖ್ಯಮಂತ್ರಿ ಸಿದ್ದರಾಮಯ್ಯ

26 Nov, 2024

ಬೆಂಗಳೂರು :  ಸಂವಿಧಾನ ನೀಡಿರುವ ಹಕ್ಕುಗಳನ್ನು ಚಲಾಯಿಸುವ ಜೊತೆಗೆ, ಭಾದ್ಯತೆಗಳನ್ನು ತಪ್ಪದೇ ಪಾಲಿಸುವುದೂ ಆವಶ್ಯಕ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಕೋಶದ ವತಿಯಿಂದ ಸಂವಿಧಾನ ಅಂಗೀಕರಣದ 75ನೇ ವಾರ್ಷಿಕೋತ್ಸವದ ಅಂಗವಾಗಿ ವಿಧಾನ ಸೌಧದ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯ ಬಳಿ ಹಮ್ಮಿಕೊಳ್ಳಲಾದ ಕಾಲ್ನಡಿಗೆ ಜಾಥಾಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಭಾರತದ ಸಂವಿಧಾನ ಅಂಗೀಕರಣಗೊಂಡ 75 ನೇ ವಾರ್ಷಿಕೋತ್ಸವವನ್ನು ಸಂವಿಧಾನ ದಿನ ಎಂದು ಆಚರಿಸುತ್ತೇವೆ. ಕೇಂದ್ರ, ರಾಜ್ಯ ಸರ್ಕಾರಗಳು ಹಾಗೂ ಎಲ್ಲ ಸ್ಥಳೀಯ ಸಂಸ್ಥೆಗಳು ಸಂವಿಧಾನದಂತೆ ನಡೆದು, ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವಂತೆ ಕೆಲಸ ಮಾಡಬೇಕು. ಆದ್ದರಿಂದ ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆಯನ್ನು ಕಡ್ಡಾಯವಾಗಿ ಓದಿ, ಅದರ ಆಶಯಗಳನ್ನು ವಿದ್ಯಾರ್ಥಿಗಳು ಮನನ ಮಾಡಿಕೊಳ್ಳಬೇಕೆಂಬುದು ನಮ್ಮ ಉದ್ದೇಶವಾಗಿದೆ ಎಂದರು.

ಸಂವಿಧಾನವನ್ನು ರಕ್ಷಿಸುವ ಕಾರ್ಯ ನಮ್ಮ ಸರ್ಕಾರ ಮಾಡುತ್ತಿದೆ. ಸಂವಿಧಾನದಲ್ಲಿ ಈಗಾಗಲೇ 106 ತಿದ್ದುಪಡಿಗಳಾಗಿದ್ದು, ವಿಶ್ವದಲ್ಲಿ ದೀರ್ಘಕಾಲದಿಂದ ಅಸ್ತಿತ್ವದಲ್ಲಿರುವುದು ಭಾರತದ ಸಂವಿಧಾನ ಎಂಬ ಹೆಮ್ಮೆ ನಮ್ಮದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಮಾಜ ಕಲ್ಯಾಣ ಸಚಿವ  ಡಾ.ಹೆಚ್.ಸಿ.ಮಹದೇವಪ್ಪ, ಅರಣ್ಯ ಸಚಿವ ಈಶ್ವರ ಖಂಡ್ರೆ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

Publisher: eSamudaay

Powered by